ವರದಿಗಾರರು :
ದರ್ಶನ್ ಎಂ.ಎನ್ ||
ಸ್ಥಳ :
Davanagere
ವರದಿ ದಿನಾಂಕ :
05-12-2025
ಮರೆಯದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.. ಡಿ.21 ರಿಂದ 24ರವರೆಗೆ ಅವಕಾಶ…1.40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿಸೆಂಬರ್ 21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು,. ಜಿಲ್ಲೆಯಲ್ಲಿ 5 ವರ್ಷದೊಳಗಿನ 1,46,126 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯಬಾರದು. ವಿವಿಧ ರಾಜ್ಯಗಳಿಂದ ಉದ್ಯೋಗ ಹರಸಿ ಬಂದಂತಹ ಕಾರ್ಮಿಕ ಕುಟುಂಬ ಮಕ್ಕಳನ್ನೂ ಗುರುತಿಸಿ ಲಸಿಕೆ ಹಾಕಬೇಕು ಎಂದು ತಿಳಿಸಿದ ಅವರು, ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ವಾಹನಗಳನ್ನು ನಿಗಧಿತ ಸಮಯಕ್ಕೆ ನಿಯೋಜಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನಗಳ ಪೂರೈಸಬೇಕು. ಬೆಸ್ಕಾಂ ಇಲಾಖೆ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು ಎಂದು ಸೂಚಿಸಿದರು
ಈ ಕಾರ್ಯಕ್ರಮ ವ್ಯಾಪಕ ಪ್ರಚಾರಕ್ಕಾಗಿ ಶಾಲಾ ಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಬೇಕು. ನಗರಸಭೆ ಮತ್ತು ಇನ್ನಿತರೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೊಲೀಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚುರಪಡಿಸಬೇಕು ಎಂದು ತಿಳಿಸಿದರು
ಜಿ.ಪಂ. ಸಿಇಓ ಗಿತ್ತೆ ಮಾಧವ ವಿಠಲ ರಾವ್ ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಸಹ ಲಸಿಕೆಯಿಂದ ಹೊರಗುಳಿಯಬಾರದು. ವಿಶೇಷವಾಗಿ ಗ್ರಾಮೀಣ ಮತ್ತು ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗಮನ ಹರಿಸಿ ಅವರಿಗೂ ಕೂಡ ಲಸಿಕೆ ನೀಡಬೇಕು. ಅದರಲ್ಲೂ ಚನ್ನಗಿರಿ ವಲಯದಲ್ಲಿ ಹೆಚ್ಚಾಗಿ ಅರಣ್ಯ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಡಿಕೆ ಕೆಲಸಕ್ಕೆ ತೆರಳುವ ಕಾರ್ಮಿಕರು ತಮ್ಮ ಮಕ್ಕಳನ್ನು ಕೆಲಸದ ಸ್ಥಳಗಳಲ್ಲಿ ಕಾಣ ಸಿಗುತ್ತಾರೆ. ಅವರನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಜಿಲ್ಲಾ ಶಸ್ಚ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ, ಆರ್‌ಸಿಹೆಚ್ ಅಧಿಕಾರಿ ಡಾ. ರೇಣುಕಾರಾಧ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
